Online News in ಕನ್ನಡ

ಎಸ್ಸಿ, ಎಸ್ಟಿ ಜನರ ಮೇಲಿನ ದೌರ್ಜನ್ಯ; ಕಾಲಮಿತಿಯಲ್ಲಿ ಸೂಕ್ತ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ ಆರೋಪ ಪಟ್ಟಿಯನ್ನು ಕಡ್ಡಾಯವಾಗಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಹೀಗಿದ್ದರೂ ಕಳೆದ ಆರು ತಿಂಗಳಲ್ಲಿ ಶೇ.84 ರಷ್ಟು ಮಾತ್ರ ಪ್ರಕರಣಗಳಲ್ಲಿ ನಿಗದಿತ ಅವಧಿಯ ಒಳಗಾಗಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಇದು ಶೇ. 100 ರಷ್ಟು ಆಗಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

ವಿಧಾನ ಸೌಧದ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗೆ ಕಡ್ಡಾಯವಾಗಿ ಆರೋಪ ಪಟ್ಟಿ ಸಲ್ಲಿಸಬೇಕು. ಇದರಲ್ಲಿ ಪೊಲೀಸರು ಯಾವುದೇ ನೆಪ ಹೇಳಬಾರದು. ನ್ಯಾಯಾಲಯದಲ್ಲಿ 56 ಪ್ರಕರಣಗಳಲ್ಲಿ ತಡೆಯಾಜ್ಞೆ ಇದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರಕರಣಗಳ ತ್ವರಿತ ವಿಚಾರಣೆಗಾಗಿ 11 ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಪ್ರಸ್ತುತ ಶಿಕ್ಷೆಯ ಪ್ರಮಾಣ ಶೇ.10ರಷ್ಟಿದ್ದು, ಇದು ಹೆಚ್ಚಾಗಬೇಕು. ಆರೋಪಿಗಳೊಂದಿಗೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ದೌರ್ಜ್ಯನ್ಯ ಪ್ರಕರಣಗಳಲ್ಲಿ ಅಂಗವೈಕಲ್ಯತೆ ಉಂಟಾದಲ್ಲಿ ನೀಡಲಾಗುವ ವೈದ್ಯಕೀಯ ಪರಿಹಾರದ ಮೊತ್ತವನ್ನು ಹೆಚ್ಚಿಸುವ ಕುರಿತು ಪರಿಶೀಲನೆ ಮಾಡಲಾಗುವುದು ಎಂದು ಇದೇ ವೇಳೆ ಸಿಎಂ ಭರವಸೆ ನೀಡಿದರು.

 

  • ಸಭೆಯ ಪ್ರಮುಖ ಅಂಶಗಳು
  • 2023ರಿಂದ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಒಟ್ಟು 6635 ಪ್ರಕರಣಗಳು ದಾಖಲು
  • ದೋಷಾರೋಪಣೆ ಪಟ್ಟಿ ಸಲ್ಲಿಸಿರುವುದು 4912 ಪ್ರಕರಣಗಳಲ್ಲಿ ಮಾತ್ರ
  • 60 ದಿನಗಳ ಒಳಗೆ ದೋಷಾರೋಪಣೆ ಪಟ್ಟಿ ಸಲ್ಲಿಸಿರುವುದು 4149 ಪ್ರಕರಣಗಳಲ್ಲಿ ಮಾತ್ರ
  • ನೋಂದಣಿಯಾದ ಒಟ್ಟು ಪ್ರಕರಣಗಳಲ್ಲಿ 60 ದಿನಗಳ ಒಳಗಾಗಿ 63% ಪ್ರಕರಣಗಳಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಕೆ
  • ಶಿಕ್ಷೆಯಾದ ಪ್ರಕರಣಗಳು ಕೇವಲ 36. ತನಿಖಾ ಹಂತದಲ್ಲಿ ಸುಮಾರು 679 ಪ್ರಕರಣಗಳು
  • ಈ ಹಿಂದೆ ನಡೆದಿರುವ ಪ್ರಕರಣಗಳ ಸ್ಥಿತಿ ಗತಿ ಏನು? ಆಯಾ ವರ್ಷದ ಪ್ರಕರಣಗಳ ನಿಖರ ದಾಖಲೆ ನೀಡುವಂತೆ ಸಿಎಂ ಸೂಚನೆ
Call Now Button