Online News in ಕನ್ನಡ

ಮೌಲ್ಯಗಳನ್ನು ಬಿತ್ತುವ ಸಲುವಾಗಿ ಸಾಧಕರ ಜಯಂತಿ ಆಚರಣೆ; ಶಿವರಾಜು ಅಭಿಮತ

ಮೈಸೂರು: ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ವಿವಿಧ ಮಹನೀಯರ ಜಯಂತಿಗಳ ಆಚರಣೆ ಮಾಡಲಾಗುತ್ತಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು ಅವರು ತಿಳಿಸಿದರು

ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ವಿವಿಧ ಜಯಂತಿಗಳಾದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಹಾಗೂ ವಿಶ್ವಕರ್ಮ ಜಯಂತಿಗಳ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸೆಪ್ಟೆಂಬರ್ 15 ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಕರ್ನಾಟಕ ಕಲಾಮಂದಿರದಲ್ಲಿ ಆಚರಣೆ ಮಾಡಲಾಗುವುದು. ಕೋಟೆ ಆಂಜನೇಯ ದೇವಸ್ಥಾನದ ಆವರಣದಿಂದ ಕಲಾಮಂದಿರದ ವರೆಗೆ ಮೆರವಣಿಗೆ ನಡೆಸಲಾಗುವುದು. ಅಂದು ಬೆಳಗ್ಗೆ 9.00 ಗಂಟೆಗೆ ಮೆರವಣಿಗೆಗೆ ಚಾಲನೆ ನೀಡಲಾಗುವುದು. ವೇದಿಕೆ ಕಾರ್ಯಕ್ರಮ ಬೆಳಗ್ಗೆ 11.30 ಗಂಟೆಗೆ ಉದ್ಘಾಟನೆ ಮಾಡಲಾಗುವುದು. ವಿಶ್ವಕರ್ಮ ಜಯಂತಿಯನ್ನು ಸೆಪ್ಟೆಂಬರ್ 17 ರಂದು ಕರ್ನಾಟಕ ಕಲಾಮಂದಿರದಲ್ಲಿ ಆಚರಣೆ ಮಾಡಲಾಗುವುದು. ಮೆರವಣಿಗೆ ಇರ್ವಿನ್ ರಸ್ತೆ ಕಾಳಮ್ಮ ದೇವಸ್ಥಾನದ ಆವರಣದಲ್ಲಿ ಬೆಳಗ್ಗೆ 9 ಚಾಲನೆ ನೀಡಲಾಗುವುದು. ಮೆರವಣಿಗೆ ಕರ್ನಾಟಕ ಕಲಾಮಂದಿರದ ವರೆಗೆ ನಡೆಯುವುದು. ವೇದಿಕೆ ಕಾರ್ಯಕ್ರಮ ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾಗುವುದು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ವೇದಿಕೆ ಮೇಲೆ ಗೀತಾ ಗಾಯನ ಏರ್ಪಡಿಸಲಾಗುವುದು. ಸಮುದಾಯದ ಮುಖಂಡರ ಸಲಹೆಯಂತೆ ದಿವ್ಯ ಸಾನಿಧ್ಯ ಹಾಗೂ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿ ಯನ್ನು ಆಹ್ವಾನಿಸಲಾಗುವುದು ಎಂದರು.

ಜಯಂತಿಗಳ ಆಚರಣೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಲ್ಲ. ಎಲ್ಲಾ ಸಮುದಾಯದವರು ಸೇರಿ ಜಯಂತಿಗಳ ಆಚರಣೆ ಮಾಡಬೇಕು. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ. ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ವಿಶ್ವಕರ್ಮ ಅವರ ತತ್ವ ಆದರ್ಶಗಳನ್ನು ಗುಣಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಜಯಂತಿಗಳು ನಡೆಯುವ ಸ್ಥಳದ ಸ್ವಚ್ಚತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ, ತಳಿರು ತೋರಣ, ಹಾಗೂ ಶಾಮಿಯಾನ ವ್ಯವಸ್ಥೆಯನ್ನು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು. ಸಮುದಾಯದ ಮುಖಂಡರು ತಮ್ಮ ತಮ್ಮ ಸಮುದಾಯದ ಬಡವರಿಗೆ ಸಹಾಯ ಮಾಡಬೇಕು. ಸಮುದಾಯದ ಮಕ್ಕಳಿಗೆ ಶೈಕ್ಷಣಿಕ ಸಹಾಯ ಮಾಡಬೇಕು. ಜಯಂತಿಗಳನ್ನು ಆಚರಣೆ ಮಾಡುವುದು ಅವರ ಆಚಾರ ವಿಚಾರಧಾರೆಗಳನ್ನು ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಆಗ ಜಯಂತಿಗಳನ್ನು ಆಚರಣೆ ಮಾಡಿದಕ್ಕೆ ಒಂದು ಅರ್ಥ ಬರುತ್ತದೆ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಿ.ಎಂ ಸುದರ್ಶನ್ ಅವರು ಮಾತನಾಡಿ, ಜಯಂತಿಗಳ ಆಚರಣೆಗೆ ಶಿಷ್ಟಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ, ಮುಖಂಡರಿಗೆ ಆಹ್ವಾನ ನೀಡಲಾಗುವುದು. ಕಲಾಮಂದಿರದಲ್ಲಿ ಗೀತಾ ಗಾಯನ ಏರ್ಪಡಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ ಕೆ ಹರೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಜಯಂತಿಗಳ ಆಚರಣೆಯ ಸಂಬಂಧ ಸಮುದಾಯಗಳ ಮುಖಂಡರು ಉಪಸ್ಥಿತರಿದ್ದರು.

Call Now Button