ಮೈಸೂರು: ನಿಮಗೆ ರಾಜಕಾರಣ ಮಾಡಬೇಕು ಎನ್ನಿಸಿದರೆ ಬನ್ನಿ ಚುನಾವಣೆಯಲ್ಲಿ ಮಾಡೋಣ. ಅದನ್ನು ಬಿಟ್ಟು ನಾಡಹಬ್ಬದ ವಿಚಾರದಲ್ಲಿ ಕೆಳ ಮಟ್ಟದ ರಾಜಕಾರಣ ಮಾಡುವುದು ಕ್ಷುಲ್ಲಕ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಆ ಮೂಲಕ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಯನ್ನು ವಿರೋಧಿಸಿದವರಿಗೆ ನೇರವಾಗಿಯೇ ತಿರುಗೇಟು ನೀಡಿದ್ದಾರೆ.
ಇಂದು ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ದಸರಾ ಮತ್ತು ನಮ್ಮ ಸಾಂಸ್ಕೃತಿಕ ಹಿರಿಮೆಯ ಪರಿಚಯ ಇಲ್ಲದವರು ಬಾನು ಮುಷ್ತಾಕ್ ಅವರಿಗೆ ವಿರೋಧಿಸಿದ್ದರು. ರಾಜಕಾರಣ ಮಾಡುವುದಿದ್ದರೆ ಚುನಾವಣೆಯಲ್ಲಿ ಮಾಡೋಣ. ನಾಡಿನ ಬಹುಸಂಖ್ಯಾತ ಸಮುದಾಯ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟಿಸಿರುವುದನ್ನು ಸ್ವಾಗತಿಸಿದೆ. ಇದು ಹೆಮ್ಮೆಯ ಸಂಗತಿ. ಅಂತಾರಾಷ್ಡ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ. ಬಾನು ಮುಷ್ತಾಕ್ ಮುಸ್ಲಿಂ ಮಹಿಳೆ ಎನ್ನುವುದಕ್ಕಿಂತ ಮಾನವೀಯ ಮೌಲ್ಯ ಪಾಲಿಸುವ ಮನುಷ್ಯರು. ನಾವು ಮನುಷ್ಯರು ಪರಸ್ಪರ ಪ್ರೀತಿಯಿಂದ ಬಾಳಬೇಕು. ದ್ವೇಷ ಮನುಷ್ಯತ್ವದ ವಿರೋಧಿ. ಆದ್ದರಿಂದ ದ್ವೇಷವನ್ನು ಆಚರಿಸುವವರು ಮನುಷ್ಯತ್ವದ ವಿರೋಧಿಗಳು ಎಂದರು.
ನಮ್ಮ ಸಂವಿಧಾನ ಜಾತ್ಯತೀತ ಮತ್ತು ಧರ್ಮಾತೀತ. ಇದನ್ನೇ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಎತ್ತಿಹಿಡಿದಿವೆ. ಯಾರಿಗೆ ಭಾರತೀಯರು ಎನ್ನುವ ಹೆಮ್ಮೆ ಇರುತ್ತದೋ ಅವರಿಗೆ ಮಾತ್ರ ಸಂವಿಧಾನದ ಬಗ್ಗೆ ಹೆಮ್ಮೆ ಇರುತ್ತದೆ. ನಮಗೆ ನಮ್ಮ ಹಕ್ಕು ಮತ್ತು ಜವಾಬ್ದಾರಿಗಳು ಗೊತ್ತಾಗಬೇಕಾದರೆ ಸಂವಿಧಾನ ಗೊತ್ತಿರಬೇಕು. ರಾಷ್ಟ್ರಕವಿ ಕುವೆಂಪು ಅವರು ಗುಡಿ, ಚರ್ಚು, ಮಸೀದಿಗಳ ಬಿಟ್ಟು ಹೊರ ಬನ್ನಿ ಎಂದು ಕರೆ ನೀಡಿದರು. ನಾವು ಅವರ ಆಶಯದಂತೆ ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ರಾಜ್ಯವನ್ನು ಗಟ್ಟಿಗೊಳಿಸಬೇಕಿದೆ ಎಂದು ಹೇಳಿದರು.


