Online News in ಕನ್ನಡ

ಮಹಿಳೆಯರ ಸ್ವಾಭಿಮಾನ, ತಾಳ್ಮೆ, ಶಕ್ತಿಯ ಪ್ರತೀಕವೇ ದಸರಾ; ಲಕ್ಷ್ಮೀ ಹೆಬ್ಬಾಳ್ಕರ್‌

ಮೈಸೂರು: ಮಹಿಳೆಯರ ಸ್ವಾಭಿಮಾನ, ಸಮೃದ್ಧಿ, ತಾಳ್ಮೆ, ಶಕ್ತಿಯ ಪ್ರತೀಕವೇ ದಸರಾ ಹಬ್ಬ. ನವ ದೇವಿಯ ಆರಾಧನೆ ಮಾಡಿ ದುಷ್ಟರ ವಿರುದ್ಧ ಶಿಷ್ಟರ ರಕ್ಷಣೆ ಮಾಡುವ ದೇವಿಯ ಆರಾಧನೆ ಮಾಡುವುದೇ ವಿಜಯ ದಶಮಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲ ಚೇತನ ಹಾಗೂ ಹಿರಿಯ ನಾಗರೀಕ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಹೇಳಿದರು.

ಇಂದು ನಾಡಹಬ್ಬ ದಸರಾ ಅಂಗವಾಗಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯ ವತಿಯಿಂದ ನಗರದ ಜೆ. ಕೆ ಗ್ರೌಂಡ್ ನಲ್ಲಿ ಆಯೋಜಿಸಲಾಗಿದ್ದ, ಮಹಿಳಾ ದಸರಾವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಡೀ ವಿಶ್ವಕ್ಕೆ ಸಂಸ್ಕೃತಿಯ ರುಚಿಯನ್ನು ಕೊಟ್ಟವರು ಮಹಿಳೆಯರು. ಸಾಂಸ್ಕೃತಿಕ ಪರಂಪರೆಯನ್ನು, ಸಂಸ್ಕೃತಿಯನ್ನು ಹಿಂದೆ ರಾಜರು ಆಳ್ವಿಕೆ ಮಾಡುತ್ತಿದ್ದರು. ಆದರೆ ಈಗ ಸರ್ಕಾರ ಬಹಳ ವಿಜೃಂಭಣೆಯಿಂದ ಆಚರಿಸುತ್ತಾ ಬರುತ್ತಿದೆ ಎಂದರು.

ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಹಿಳೆಯರಿಗೆ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ಕಟ್ಟಿಕೊಡಬೇಕು, ದುಡಿಯುವ ಕೈಗಳಿಗೆ ಕೆಲಸ ಕೊಡಬೇಕು, ಮಹಿಳೆಯರು ಸ್ವಾವಲಂಬಿಯಾಗಿ ಜೀವಿಸಲು ಸಹಾಯ ಮಾಡಬೇಕು ಎಂಬ ಚಿಂತನೆಯನ್ನು ಇಟ್ಟುಕೊಂಡು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಮಹಿಳೆಯರನ್ನು ಕೇಂದ್ರೀಕೃತವಾಗಿ ಇಟ್ಟುಕೊಂಡು ಈ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಕೋಟ್ಯಾಂತರ ಮಹಿಳೆಯರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಸಂಸ್ಕೃತಿಯ ರಾಯಭಾರಿಯಾದ ಮಹಿಳೆಯರು ಜೀವನದ ಹೋರಾಟದಲ್ಲಿ ನಿಮ್ಮ ಆರೋಗ್ಯದ ಕಡೆಗೂ ಹೆಚ್ಚು ಗಮನ ಕೊಡಿ ನೀವು ಸಶಕ್ತರಾದರೆ ನಿಮ್ಮ ಕುಟುಂಬವು ಕೂಡ ಸಶಕ್ತ ವಾಗುತ್ತದೆ. ಆದ್ದರಿಂದ ಮಹಿಳೆಯರು ಆರೋಗ್ಯದ ಕಡೆ ಕಾಳಜಿ ವಹಿಸಿ ಎಂದು ಮಹಿಳೆಯರಿಗೆ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಡಾ. ಪುಷ್ಪ ಅಮರನಾಥ್ ಮಾತನಾಡಿ, ದೇಶದ ಶಕ್ತಿ ಎಂದರೆ ಮಹಿಳಾ ಶಕ್ತಿ, ಮಹಿಳೆ ಅಡುಗೆ ಮನೆಯಿಂದ ಹಿಡಿದು ಅಂತರಿಕ್ಷಕ್ಕೆ ಹಾರುವುದರ ಮೂಲಕ ಸಮಾನತೆಯನ್ನು ತೋರಿಸಿಕೊಟ್ಟಿದ್ದಾರೆ. ನಮ್ಮ ಪಂಚ ಗ್ಯಾರಂಟಿ ಯೋಜನೆಯ ಕಾರ್ಯಕ್ರಮಗಳು ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಿಕೊಡುವುದಾಗಿದೆ ಎಂದು ಹೇಳಿದರು.

ಮಹಿಳೆಯರಿಗೆ ಅರ್ಥಿವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಸಮಾನತೆ ಸಿಕ್ಕಿದೆ ಎಂದರೆ ಅದಕ್ಕೆ ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರೇ ಕಾರಣ. ಮಹಿಳೆ ರಾಜಕೀಯಕ್ಕೆ ಬಂದರೆ ಸಮಾನತೆ ಸಾಧ್ಯ ಎಂಬ ಮಾತನ್ನು ಅಂಬೇಡ್ಕರ್ ಅವರು ಹೇಳಿದ್ದರು ಅದು ಇಂದು ಸಾಧ್ಯವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯ ಅಧ್ಯಕ್ಷರಾದ ಮಲ್ಲಿಗೆ ವೀರೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಮಹೇಶ್ ಬಾಬು, ಜಿಲ್ಲಾ ಪಂಚಾಯತ್ ನ ಉಪ ಕಾರ್ಯದರ್ಶಿಗಳು ಹಾಗೂ ದಸರಾ ಉಪ ಸಮಿತಿಯ ವಿಶೇಷಾಧಿಕಾರಿಗಳಾದ ಬಿ.ಎಂ ಸವಿತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಹಾಗೂ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯ ಕಾರ್ಯಾಧ್ಯಕ್ಷರಾದ ಬಿ. ಬಸವರಾಜು, ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿಯ ಉಪಾಧ್ಯಕ್ಷರಾದ ಲತಾ ಮೋಹನ್ ರಾಯ್ ಅವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Call Now Button