Online News in ಕನ್ನಡ

ವಾಲ್ಮೀಕಿ ಸಮುದಾಯ ST ಗೆ ಸೇರಿದ್ದು ಹೇಗೆ..? ಇತಿಹಾಸ ತಿಳಿಸಿದ ಸಿಎಂ

ಬೆಂಗಳೂರು: ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ಎಸ್.ಟಿ ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ ಆಗ ಸೇರಿಸಲು ಆಗಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಾಲ್ಮೀಕಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಅಂದು ಉಗ್ರಪ್ಪ ಮತ್ತು ದೇವೇಗೌಡರ ನಡುವಿನ‌ ಒಡನಾಟ ಚೆನ್ನಾಗಿತ್ತು, ಈಗಲೂ ಚೆನ್ನಾಗಿದೆ. ದೇವೇಗೌಡರು ಮತ್ತು ಚಂದ್ರಶೇಖರ್ ಅವರ ಒಡನಾಟ ಚೆನ್ನಾಗಿತ್ತು. ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದಾಗ ಅವರನ್ನು ದೇವೇಗೌಡರ ಮೂಲಕ ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ಎಸ್.ಟಿ ಗೆ ಸೇರಿಸಿದವರು ಉಗ್ರಪ್ಪ. ವಾಲ್ಮೀಕಿ, ಬೇಡ ಮತ್ತು ನಾಯಕ‌ ಸಮುದಾಯಕ್ಕೆ ಮೀಸಲಾತಿ ದೊರಕಲು ಉಗ್ರಪ್ಪನವರೇ ಕಾರಣ. ಈಗ ಕುರುಬರನ್ನು ಎಸ್.ಟಿ ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ ಎಂದು ಸ್ಪಷ್ಟನೆ ನೀಡಿದರು.
ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ನನ್ನದೇ ನೇತೃತ್ವದ ಸರ್ಕಾರ. ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ದೇಸಾಯಿ ಶಾಲೆಗಳನ್ನು ಮಾಡಿದ್ದು ನಾನೇ. ಹೀಗಾಗಿ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದು ಕರೆ ನೀಡಿದರು.
ಮುಂದುವರೆದು ಮಾತನಾಡಿದ ಅವರು, ಕುರುಬರನ್ನು ಎಸ್‌.ಟಿ ಗೆ ಸೇರಿಸಿದರೆ ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ. ಜೆ.ಹೆಚ್.ಪಟೇಲರು ಸಿಎಂ ಆಗಿದ್ದಾಗ ಬೆಸ್ತರು ಸೇರಿ ಹಲವು ಸಮುದಾಯಗಳನ್ನು ಎಸ್.ಟಿ ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು. ಇವತ್ತಿನವರೆಗೂ ಇದು ಸಾಧ್ಯವಾಗಿಲ್ಲ ಎಂದು ತಿಳಿಸಿದರು.
Call Now Button