ಬೆಂಗಳೂರು: ಕಾಂಗ್ರೆಸ್‍ನ ಮಾಜಿ ಶಾಸಕ ಆರ್.ವಿ.ದೇವರಾಜ್ ಅವರು ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಕಾಂಗ್ರೆಸ್ ನಾಯಕರಾಗಿದ್ದ ಆರ್. ವಿ.ದೇವರಾಜ್ ಅವರು ಸೋಮವಾರ ಮೈಸೂರಿಗೆ ಆಗಮಿಸಿ ಚಾಮುಂಡಿಬೆಟ್ಟಕ್ಕೆ ತೆರಳುವ ಮಾರ್ಗದಲ್ಲಿ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಇವರನ್ನು ನಗರದ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಜಯದೇವ ಹೃದ್ರೋಗ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಕೊನೆಯುಸಿರೆಳೆದಿದ್ದಾರೆ.
1957ರ ಡಿಸೆಂಬರ್ 3ರಂದು ಬೆಂಗಳೂರಲ್ಲಿ ಜನಿಸಿದ್ದ ಇವರು ರಾಜಧಾನಿಯನ್ನು ತಮ್ಮ ರಾಜಕೀಯ ಕರ್ಮಭೂಮಿಯಾಗಿ ಆಯ್ಕೆ ಮಾಡಿಕೊಂಡು ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡಿದ್ದರು. 1989 ಮತ್ತು 1999ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2004ರಲ್ಲಿ ಎಸ್.ಎಂ. ಕೃಷ್ಣ ಅವರಿಗೆ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದರು. ನಂತರ 2013ರಲ್ಲಿ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಶಾಸರಕಾಗಿದ್ದರು.
ಇದರೊಂದಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರಾಗಿ, ಕರ್ನಾಟಕ ಸ್ಲಂ ಬೋರ್ಡ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸೈದ್ಧಾಂತಿಕ ಬುದ್ಧತೆಯೊಂದಿಗೆ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಮುಖಂಡರಾಗಿ ದೀರ್ಘ ಕಾಲ ಪಕ್ಷಕ್ಕಾಗಿ ದುಡಿದ ಆರ್.ವಿ.ದೇವರಾಜ್ ಒಂದು ದಶಕಗಳಿಂದ ರಾಜಕೀಯವಾಗಿ ದೂರ ಉಳಿದಿದ್ದರು.
ದೇವರಾಜ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲ ಕಾಂಗ್ರೆಸ್ ಮುಖಂಡರು ಸಂತಾಪ ಸೂಚಿಸಿದ್ದಾರೆ.

