Online News in ಕನ್ನಡ

ಮಂಡ್ಯದಲ್ಲಿ ಕೃಷಿ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

ಮಂಡ್ಯ: ರೈತರು ತಮ್ಮ ವ್ಯವಸಾಯ ಪದ್ದತಿಯಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹೇಳಿದರು.
ಇಂದು ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಜಲಾನಯನ ಅಭಿವೃದ್ಧಿ ಇಲಾಖೆ, ರೇಷ್ಮೆ, ಅರಣ್ಯ, ಮೀನುಗಾರಿಕೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಬಾರ್ಡ್ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ವಿ.ಸಿ ಫಾರಂ ಆವರಣದಲ್ಲಿ ಆಯೋಜಿಸಲಾಗಿದ್ದ “ಕೃಷಿ ಮೇಳ 2025” ಸಮಗ್ರ ಕೃಷಿಯಿಂದ ಸುಸ್ಥಿರತೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಸ್ಥಾಪಿಸಲು ನನ್ನ ಮುಂದೆ ಮೊದಲು ಬೇಡಿಕೆ ಇಟ್ಟವರು ಕೃಷಿ ಸಚಿವ ಎನ್.‌ ಚಲುವರಾಯಸ್ವಾಮಿ, ಮಂಡ್ಯ ಮೈಸೂರು ಚಾಮರಾಜನಗರ ಕೊಡಗು ಭಾಗದ ರೈತರಿಗಾಗಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಅಗತ್ಯವಿದೆ ಎಂದು ನನಗೂ ಸಹ ತಿಳಿಯಿತು. ನಂತರ ಸದರಿ ವಿಚಾರವನ್ನು ಕ್ಯಾಬಿನೆಟ್ ನಲ್ಲಿ ಚರ್ಚೆ ಮಾಡಿ ಎಲ್ಲಾ ಸಚಿವರ ಒಪ್ಪಿಗೆ ಪಡೆದು ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಯಿತು ಎಂದು ಹೇಳಿದರು.
ಮಂಡ್ಯ ಭಾಗದ 5 ಜಿಲ್ಲೆಗಳ ಪ್ರಮುಖ ಬೆಳೆಗಳ ಪ್ರಾತ್ಯಕ್ಷಿಕೆಗಳನ್ನು ಕೃಷಿ ಮೇಳದಲ್ಲಿ ಆಯೋಜಿಸಲಾಗಿದೆ. ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯಗಳು ಅಭಿವೃದ್ಧಿಪಡಿಸಿದ ತಳಿಗಳು ಮತ್ತು ತಂತ್ರಜ್ಞಾನವನ್ನು ತಮ್ಮಲ್ಲಿಗೆ ಇಟ್ಟುಕೊಂಡರೆ ಪ್ರಯೋಜನವಿಲ್ಲ ಅದನ್ನು ರೈತರಿಗೆ ತಲುಪಿಸಬೇಕು ಆಗ ಮಾತ್ರ ರೈತರು ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಭಾರತ ಕೃಷಿ ಪ್ರಧಾನ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಕೃಷಿಕರ ಸಂಖ್ಯೆ ಇಳಿಮುಖವಾಗಿದೆ ಎಂದು ಅಭಿಪ್ರಾಯಪಟ್ಟರು.

1939 ರಲ್ಲಿ ಮೊದಲು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 630 ಎಕ್ಕರೆ ಜಾಗದಲ್ಲಿ ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ಸಂಶೋಧನಾ ಕೇಂದ್ರವನ್ನು ತೆರೆದರು. ನಂತರ ರಾಜ್ಯದ 4 ಭಾಗದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಯಿತು. ರಾಜ್ಯದ ಎಲ್ಲಾ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಉತ್ತಮ ಕೊಡುಗೆ ಹಾಗೂ ಕಾರ್ಯ ಮಾಡುತ್ತ ಮುಂದೆ ಸಾಗುತ್ತಿವೆ . ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ರಾಜ್ಯದ 5ನೇ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯವಾಗಿ ಹೊರಹೊಮ್ಮಿದೆ. ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆಯಾದ ಮೊದಲ ವರ್ಷದಲ್ಲೇ ಯು.ಜಿ.ಸಿ ಮಾನ್ಯತೆ ಪಡೆದಿದೆ. ಶಿವಮೊಗ್ಗ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯಕ್ಕೆ 2008 ರಲ್ಲಿ ಅನುಮತಿ ದೊರೆತಿತ್ತು ಆದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ 2013 ರ ಅವಧಿಯಲ್ಲಿ ಶಿವಮೊಗ್ಗ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಯಿತು – ಕೃಷಿ ಸಚಿವರಾದ ಎನ್.‌ ಚಲುವರಾಯಸ್ವಾಮಿ 

ಮಂಡ್ಯ ಕೃಷಿ ಪ್ರಧಾನವಾದ ಜಿಲ್ಲೆ ನಾನು ರಾಜಕೀಯಕ್ಕೆ ಬರುವ ಮೊದಲು ಸಹ ಕೃಷಿಕನಾಗಿದ್ದೆ. ಮೈಸೂರಿನ ರೈತ ಸಂಘದ ಮೊದಲ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಕೃಷಿಯನ್ನು ವೈಜ್ಞಾನಿಕ ವಿಧಾನದಲ್ಲಿ ಮಾಡಿದಾಗ ಕೃಷಿಯಿಂದ ಹೆಚ್ಚಿನ ಲಾಭಗಳಿಸಬಹುದು. ರೈತರು ತಾವು ಬೆಳೆದ ಬೆಳೆಗಳನ್ನು ಮೌಲ್ಯವರ್ತನೆ ಮಾಡಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಎ.ಬಿ. ರಮೇಶ್ ಬಂಡಿಸಿದ್ದೇಗೌಡ, ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ, ಮೈ ಶುಗರ್ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ.ಡಿ ಗಂಗಾಧರ, ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಡಾ.ಕೆ.ಎಂ ಹರಿಣಿ ಕುಮಾರ್, ರಾಜ್ಯ ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಎಂ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಸಚಿನ್ ಚಲುವರಾಯಸ್ವಾಮಿ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

 

Call Now Button