ಬೆಂಗಳೂರು: ಆದಾಯ ತೆರಿಗೆ ಅಧಿಕಾರಿಗಳ ದಾಳಿಯ ಹಿನ್ನಲ್ಲೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಸಿಇಓ ಸಿ.ಜೆ.ರಾಯ್ ಅವರು ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಲ್ಲಿನ ಲ್ಯಾಂಗ್ಫೋರ್ಡ್ ರಸ್ತೆಯಲ್ಲಿ ಇರುವ ಫ್ಲ್ಯಾಟ್ ಮೇಲೆ ಪದೇ ಪದೇ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳ ಮಾಡುತ್ತಿದ್ದಾರೆಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕೇರಳ ಮೂಲದ ೫೭ ವರ್ಷದ ಸಿಜೆ ರಾಯ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ಪ್ರಮುಖ ರಿಯಲ್ ಎಸ್ಟೇಟ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಂಪನಿಯ ಸಂಸ್ಥಾಪಕರಾಗಿದ್ದರು. ಇಂದು ಸಂಜೆ ಬೆಂಗಳೂರಿನ ಆನೇಪಾಳ್ಯದಲ್ಲಿ ಇರುವ ತಮ್ಮ ಕಚೇರಿಯಲ್ಲಿ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.
2005ರಲ್ಲಿ ಆರಂಭವಾದ ಈ ಸಂಸ್ಥೆ, 65ಕ್ಕೂ ಹೆಚ್ಚು ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದೆ. ವಸತಿ ಅಪಾರ್ಟ್ಮೆಂಟ್, ವಿಲ್ಲಾಗಳು, ವಾಣಿಜ್ಯ ಸಂಕೀರ್ಣಗಳು, ಶಿಕ್ಷಣ, ಆತಿಥ್ಯ ಮತ್ತು ಮನರಂಜನಾ ಕ್ಷೇತ್ರಗಳಲ್ಲಿ ಕಾನ್ಫಿಡೆಂಟ್ ಗ್ರೂಪ್ ಕಾರ್ಯನಿರ್ವಹಿಸುತ್ತಿದೆ.
ಸಿಜೆ ರಾಯ್ ಅವರು ಸ್ವಿಟ್ಜರ್ಲೆಂಡ್ನ ಎಸ್ಬಿಎಸ್ ಬಿಸಿನೆಸ್ ಸ್ಕೂಲ್ನಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ನಲ್ಲಿ ಡಾಕ್ಟರೇಟ್ ಪಡೆದಿದ್ದರು. ಕಾನ್ಫಿಡೆಂಟ್ ಗ್ರೂಪ್ ಎಂಬ ಸಂಸ್ಥೆ ಸ್ಥಾಪಿಸಿ, ಕೇರಳ ಮತ್ತು ಬೆಂಗಳೂರಿನಲ್ಲಿ ಪ್ರಮುಖ ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದ್ದು, ದುಬೈ ಮಾರುಕಟ್ಟೆಗೂ ವಿಸ್ತರಿಸಿದ್ದಾರೆ.


