ತಮಿಳುನಾಡು: ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಸಿನಿಮೀಯ ರೀತಿಯಲ್ಲಿ ಟಿವಿಕೆ ಪಕ್ಷ ಅತ್ಯಂತ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. 234 ಸ್ಥಾನಗಳು ಒಳಗೊಂಡ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸಿದ್ಧ ನಟ ವಿಜಯ್ ನಾಯಕತ್ವದ ತಮಿಳಗ ವೆಟ್ರಿ ಕಳಗಂ ಪಕ್ಷ 108ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಆಡಳಿತರೂಢ ಡಿಎಂಕೆ ಅಘಾತ ಅನುಭವಿಸಿದ್ದು ಕೇವಲ 61 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು ಎಐಡಿಎಂಕೆ ಪಕ್ಷದೂ 67 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ದ್ರಾವಿಡರ ನೆಲದಲ್ಲಿ ಡಿಎಂಕೆ ಆಡಳಿತ ಅಂತ್ಯ ಕಂಡಿದ್ದು, ಹೊಸ ಸೂರ್ಯ ಉದಯಿಸಿದ್ದಾನೆ.
ಇನ್ನು ಇಡೀ ದೇಶದ ಗಮನ ಸೆಳೆದಿದ್ದ ಪಶ್ಚಿಮ ಬಂಗಾಲದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷ ಅಧಿಕಾರ ಕಳೆದುಕೊಂಡಿದ್ದು ಬಿಜೆಪಿ 180ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಅಧಿಕಾರದ ಗದ್ದುಗೆ ಹಿಡಿಯುವುದು ಬಹುತೇಕ ನಿಶ್ಚಯಗೊಂಡಿದೆ. ಟಿಎಂಸಿ 100 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೂ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಕ್ಷೇತ್ರದಲ್ಲಿ ಹಿನ್ನಡೆ ಸಾಧಿಸಿರುವುದು ಅಚ್ಚರಿ ಮೂಡಿಸಿದೆ. ಕಾಂಗ್ರೆಸ್ 7 ಹಾಗೂ ಇತರರು 3 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಇನ್ನು ಕೇರಳಾದಲ್ಲಿ ಯುಡಿಎಫ್ 98 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಎಲ್ಡಿಎಫ್ ಪಕ್ಷ 41 ಸ್ಥಾನಗಳಲ್ಲಿ ಪಡೆದರೆ, ಬಿಜೆಪಿ ಕೇವಲ 1 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಒಟ್ಟು 140 ವಿಧಾನಸಭಾ ಕ್ಷೇತ್ರಗಳ ಪೈಕಿ ಯುಡಿಎಫ್ ಹತ್ತಿರತ್ತಿರ 100 ಸ್ಥಾನಗಳಲ್ಲಿ ಗೆಲುವು ಸಾಧಿಸಿ ಸರಕಾರ ರಚನೆಗೆ ಮುಂದಾಗಿದೆ.
ಅಲ್ಲದೆ, ಅಸ್ಸಾಂನಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. 126 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 98 ಕ್ಷೇತ್ರ, ಕಾಂಗ್ರೆಸ್ ಕೇವಲ 26 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಪುದುಚೇರ4ಇಯಲ್ಲಿ 30 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 22 ಕ್ಷೇತ್ರ ಹಾಗೂ ಕಾಂಗ್ರೆಸ್ 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.


