ಚಿತ್ರದುರ್ಗ: ವರ್ಷಾಂತ್ಯದ ಸಂಭ್ರಮಕ್ಕೆ ಅಣಿಯಾಗುತ್ತಿದ್ದ ರಾಜ್ಯದ ಜನತೆಗೆ ಮತ್ತೊಂದು ರಸ್ತೆ ಅಪಘಾತದ ಸುದ್ದಿ ಎರಗಿಬಂದಿದೆ. ಇಲ್ಲಿನ ಹಿರಿಯೂರಿನ ಜವನಗೊಂಡನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ೪೮ರಲ್ಲಿ ಖಾಸಗಿ ಟ್ರಾವೆಲ್ ಬಸ್‌ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು, ೫ ಮಂದಿ ಸಜೀವ ದಹನವಾಗಿರುವ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ. ಒಂಬತ್ತು ಮಂದಿ ನಾಪತ್ತೆಯಾಗಿದ್ದಾರೆ. ಖಾಸಗಿ ಸ್ಲೀಪರ್ ಕೋಚ್ ಬಸ್ ಬೆಂಗಳೂರಿನಿಂದ ಶಿವಮೊಗ್ಗದ ಮೂಲಕ ಗೋಕರ್ಣಕ್ಕೆ ಹೊರಟಿತ್ತು. ಪರಸ್ಪರ ಡಿಕ್ಕಿ ಬಳಿಕ ಕಂಟೇನರ್ ಲಾರಿ ಹಾಗೂ ಬಸ್ ಎರಡೂ ಬೆಂಕಿ ಹೊತ್ತಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟುಕರಕಲಾಗಿದೆ. ದುರಂತದಲ್ಲಿ 9 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಲಾರಿ ಚಾಲಕ ಕೂಡ ಸಜೀವ ದಹನವಾಗಿದ್ದಾನೆ.

ಬಸ್ನಲ್ಲಿ ಸುಮಾರು 32 ಮಂದಿ ಪ್ರಯಾಣಿಕರು ಇದ್ದರು. ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ಈ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಒಂದು ಕಡೆಯಿಂದ ಬರುತ್ತಿದ್ದ ಲಾರಿಯೊಂದು ಡಿವೈಡರ್ ಹಾರಿ ಮತ್ತೊಂದು ಕಡೆಯಿಂದ ಬರುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಲೀಪರ್ ಕೋಚ್ ಬಸ್ ರಸ್ತೆ ಮಧ್ಯೆ ಹೊತ್ತಿ ಉರಿದಿದೆ. ಲಾರಿ ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು, ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಹೇಳಲಾಗುತ್ತಿದೆ.

ಘಟನೆ ಕುರಿತು ಐಜಿಪಿ ರವಿಕಾಂತೇಗೌಡ ಅವರು ಪ್ರತಿಕ್ರಿಯೆ ನೀಡಿದ್ದು, ಬಸ್ಸಿನಿಂದ 7 ಮೃತ ದೇಹಗಳನ್ನು ಹೊರತೆಗೆಯಲಾಗಿದೆ. ಓರ್ವ ಲಾರಿ ಚಾಲಕ ಸೇರಿ ಸದ್ಯದ ಮಾಹಿತಿ ಪ್ರಕಾರ 9 ಜನ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಶಿರಾ ಹಾಗೂ ಹಿರಿಯೂರು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಅಂಬುಲೆನ್ಸ್ ಮೂಲಕ ಕಳುಹಿಸಿಕೊಡಲಾಗಿದೆ. ಬೆಂಗಳೂರಿನಿಂದ ಡಿಎನ್‌ಎ ಅಂಡ್ ಸುಕೋ ಟೀಂ ಬಂದಿದೆ ಎಂದು ಹೇಳಿದ್ದಾರೆ.
ಸೀಬರ್ಡ್ ಬಸ್ಸಿನಲ್ಲಿದ್ದ 21 ಜನರು ಪತ್ತೆಯಾಗಿದ್ದು 11 ಜನರು ಪತ್ತೆಯಾಗಿಲ್ಲ. ಪತ್ತೆಯಾಗಿರುವವರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿದ್ದೇವೆ. ಈ ಪೈಕಿ ಆರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
(ಬಾಕ್ಸ್)
ರಾಜ್ಯ ಸರಕಾರದಿಂದ ೫ ಲಕ್ಷ ರೂ. ಪರಿಹಾರ ಘೋಷಣೆ
ಬೆಂಗಳೂರು: ಚಿತ್ರದುರ್ಗದ ಹಿರಿಯೂರು ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ತಲಾ ೫ ಲಕ್ಷ ರೂ. ಪರಿಹಾರವನ್ನು ರಾಜ್ಯ ಸರಕಾರ ಘೋಷಿಸಿದೆ. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದ್ದಾರೆ.

ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ ಎಂದು ಹೇಳಿದ್ದಾರೆ.
ಅಪಘಾತದ ಬಗ್ಗೆ ಸೂಕ್ತ ತನಿಖೆ ನಡೆಸಿ, ಕಾರಣವನ್ನು ಪತ್ತೆ ಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಮಡಿದ ಕುಟುಂಬಸ್ಥರ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆಂದು ತಿಳಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿ, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಮತ್ತು ಟ್ರಕ್ ನಡುವೆ ಹಿರಿಯೂರು ಬಳಿ ಅಪಘಾತ ಸಂಭವಿಸಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಮೃತಪಟ್ಟವರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ ಎಂದು ಹೇಳಿದ್ದಾರೆ.
ಪ್ರಧಾನಿ ಮೋದಿ ಸಂತಾಪ

ಈ ನಡುವೆ ಸಾಮಾಜಿಕ ಜಾಲತಾಣ ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಮೃತರ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ.ಪರಿಹಾರ ಘೋಷಣೆ ಮಾಡಿದ್ದಾರೆ.
ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್)ಯಿಂದ 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.
