ಮಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಉದ್ಭವಿಸಿರುವ ನಾಯಕತ್ವ ಬದಲಾವಣೆ ಬಿಕ್ಕಟ್ಟು ಶಮನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪರಸ್ಪರ ಬ್ರೇಕ್ ಫಾಸ್ಟ್ ಮೀಟಿಂಗ್ಗಳನ್ನು ನಡೆಸಿ ಒಗ್ಗಟ್ಟನ್ನು ಪ್ರದರ್ಶಿಸಿರುವ ಬೆನ್ನ ಹಿಂದೆಯೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಮುಖಾಮುಖಿಯಾಗಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಿರುವ ಮಹಾತ್ಮ ಗಾಂಧಿ ನಾರಾಯಣ್ ಗುರು ಸಂವಾದದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಈ ಇಬ್ಬರು ನಾಯಕರು ಆಗಮಿಸಿದ್ದಾರೆ. ಇವರೊಂದಿಗೆ ಸಚಿವ ದಿನೇಶ್ ಗುಂಡೂರಾವ್, ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಜರಿದ್ದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿವಾಸದಲ್ಲಿ ಮಂಗಳವಾರ ಉಪಹಾರ ಕೂಟದಲ್ಲಿ ಭಾಗವಹಿಸಿದ ಬಳಿಕೆ ಸ್ವತಃ ಸಿದ್ದರಾಮಯ್ಯ ಅವರು ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡುತ್ತೇನೆ. ಅವಕಾಶ ಸಿಕ್ಕರೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದರು.
ಈನಡುವೆ, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಸಂಬಂಧ ಗೊಂದಲ ಬಗೆಹರಿದಿದೆ ಎನ್ನುವಷ್ಟರಲ್ಲಿ ಎಐಸಿಸಿ ಪ್ರಧಾನ ಕಾಯದರ್ಶಿ ಕೆ.ಸಿ. ವೇಣುಗೋಪಾಲ್ ಎದುರು ಕಾಂಗ್ರೆಸ್ ಕಾರ್ಯಕರ್ತರು ಡಿಕೆ ಡಿಕೆ ಎಂದು ಕೂಗಿದ ಪ್ರಸಂಗ ನಡೆದಿದೆ. ಮಂಗಳೂರು ವಿಶ್ವ ವಿದ್ಯಾನಿಲಯದಲ್ಲಿ ಆಯೋಜಿಸಿರುವ ಮಹಾತ್ಮ ಗಾಂಧಿ ನಾರಾಯಣ್ ಗುರು ಸಂವಾದದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿರುವ ವೇಣುಗೋಪಾಲ್ ಅವರನ್ನು ಸ್ವಾಗತಿಸಲು ಕಾರನ್ನು ಸುತ್ತುವರೆದ ಕಾರ್ಯಕರ್ತರು ಡಿಕೆ ಡಿಕೆ ಎಂದು ಘೋಷಣೆ ಕೂಗಿದರು.


