ನವ ದೆಹಲಿ: ದೆಹಲಿಗೆ ಸ್ಥಳಾಂತರಗೊಂಡ ರಾಜ್ಯ ರಾಜಕಾರಣದ ಬಿಕ್ಕಟ್ಟು ಅಂತಿಮ ಘಟ್ಟಕ್ಕೆ ತಲುಪಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವ ಕ್ಷಣದಲ್ಲಾದರೂ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ವಿಶ್ವಸನೀಯ ಮೂಲಗಳಿಂದ ಧೃಡಪಟ್ಟಿದೆ.
ಇಡೀ ದಿನ ದೆಹಲಿಯಲ್ಲಿ ನಡೆದ ಸರಣಿ ಸಭೆಯ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಮಾಧ್ಯಮಗಳು ಸೃಷ್ಟಿಸುತ್ತಿರುವ ಊಹಾಪೋಹಗಳ ಬಗ್ಗೆ ಚರ್ಚೆಗಳೇ ನಡೆದಿಲ್ಲ ಎಂದು ಹೇಳುವ ಮೂಲಕ ನಾಯಕತ್ವ ಬದಲಾವಣೆ ವಿಷಯವನ್ನು ಅಲ್ಲಗಳೆದಿದ್ದರು.
ಆದರೆ, ಮೂಲಗಳ ಪ್ರಕಾರ, ನಾಯಕತ್ವ ಬದಲಾವಣೆಗೆ ಕಾಲ ಸನ್ನಿಹಿತಗೊಂಡಿದ್ದು, ಸ್ವತಃ ಸಿದ್ದರಾಮಯ್ಯ ಅವರೇ ಯಾವ ಕ್ಷಣದಲ್ಲಾದರೂ ರಾಜೀನಾಮೆ ನೀಡಬಹುದು ಎಂದು ಹೇಳಲಾಗಿದೆ. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣ ಪ್ರವೇಶಿಸಲು ಆಫರ್ ನೀಡಲಾಗಿತ್ತಾದರೂ, ಅದನ್ನು ಸಿಎಂ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ ಎನ್ನಲಾಗಿದೆ.
ಈನಡುವೆ, ಅಧಿಕಾರ ಹಂಚಿಕೆ ಸೂತ್ರದಂತೆ ನಾಯಕತ್ವ ಬದಲಾವಣೆ ಆಗಲೇ ಬೇಕೆಂದು ಡಿ.ಕೆ.ಶಿವಕುಮಾರ್ ಪಟ್ಟು ಹಿಡಿದಿದ್ದು, ಹೈಕಮಾಂಡ್ ಅನ್ನು ಧರ್ಮಸಂಕಟಕ್ಕೆ ಸಿಲುಕಿಸಿದೆ. ಸಿಎಂ ಸಿದ್ದರಾಮಯ್ಯ ಕರ್ನಾಟಕದ ಮಾಸ್ ಲೀಡರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅತ್ಯುತ್ತಮ ಸಂಘಟಕ. ಇಬ್ಬರೂ ಕಾಂಗ್ರೆಸ್‌ಗೆ ಅನಿವಾರ್ಯವಾಗಿರುವುದರಿಂದ ಸಮಯೋಚಿತ ನಿರ್ಧಾರಕ್ಕೆ ಬರಲು ಹೈಕಮಾಂಡ್ ತೀರ್ಮಾನಿಸಿದೆ.
ರಾಜ್ಯಸಭಾ ಮತ್ತು ವಿಧಾನ ಪರಿಷತ್ ಚುನಾವಣೆಗಳ ಹಿನ್ನಲ್ಲೆಯಲ್ಲಿ ಜೂನ್ 16ರವರೆಗೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಮೌನಕ್ಕೆ ಶರಣಾಗಲು ಹೈಕಮಾಂಡ್ ಸೂಚಿಸಿದೆ ಎಂದು ಹೇಳಲಾಗುತ್ತಿದ್ದರೂ, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಆಪ್ತ ಬಣದೊಂದಿಗೆ ಚರ್ಚಿಸಿದ ಬಳಿಕ ತಮ್ಮ ನಿಲುವನ್ನು ಸ್ಪಷ್ಟಪಡಿಸುವ ಸಾಧ್ಯತೆ ಇದೆ.
ಈನಡುವೆ, ಸಿಎಂ ಸಿದ್ದರಾಮಯ್ಯ ಇಂದು ಮಧ್ಯರಾತ್ರಿ ರಾಜ್ಯಕ್ಕೆ ಹಿಂದಿರುಗಲಿದ್ದು, ಅವರೊಂದಿಗೆ ಬಹುತೇಕ ನಾಯಕರು ರಾಜ್ಯಕ್ಕೆ ಮರಳಲಿದ್ದಾರೆ. ನಾಳೆ ರಾಜ್ಯದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುವ ಸಾಧ್ಯತೆಗಳು ಹೆಚ್ಚಾಗಿದೆ.


