ನವ ದೆಹಲಿ : ಕನ್ನಡ ಚಿತ್ರರಂಗದ ಹಿರಿಯ ನಟ, ಅಭಿನಯ ಚತುರ, ಸುರದ್ರೂಪಿ ಕಲಾವಿದ ಅನಂತ್ ನಾಗ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ೨೦೨೪ನೇ ಸಾಲಿನ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಲಭಿಸಿದೆ. ಕೇಂದ್ರ ಸರಕಾರ ಈ ಘೋಷಣೆಯನ್ನು ಮಾಡಿದ್ದು ಕನ್ನಡ ಚಿತ್ರರಂಗ ಹಾಗೂ ಕೋಟ್ಯಾಂತರ ಕನ್ನಡಿಗರು ಸಂಭ್ರಮಿಸುವ ಕ್ಷಣ ಒದಗಿಬಂದಿದೆ.
ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ನೇಮಿಸಿದ್ದ ಆಯ್ಕೆ ಸಮಿತಿಯ ಶಿಫಾರಸ್ಸಿನನ್ವಯ ಅನಂತ್ ನಾಗ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿಗಳು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಪ್ರದಾನ ಮಾಡುವರು.
ಐದು ದಶಕಗಳ ಕಾಲ ಚಿತ್ರರಂಗದಲ್ಲಿ ತಮ್ಮದೇ ಸೇವೆ ಮತ್ತು ಅಭಿಮಾನಿಗಳನ್ನು ಹೊಂದಿರುವ ಅನಂತ್ ನಾಗ್, ಕನ್ನಡ, ಹಿಂದಿ, ಮರಾಠಿ, ತಮಿಳು, ತೆಲುಗು, ಮಲಯಾಳಂ ಹಾಗೂ ಇಂಗ್ಲಿಷ್ ಭಾಷೆಗಳ ೩೦೦ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ.


