Online News in ಕನ್ನಡ

ಭಗವಂತ ಯಾವಾಗ ಅವಕಾಶ ಕೊಡುತ್ತಾನೋ ಕೊಡಲಿ; ಡಿಕೆಶಿ

ಬೆಂಗಳೂರು: ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಎಲ್ಲೂ ಹೇಳಿಲ್ಲ. ಕೆಲವು ಮಾಧ್ಯಮಗಳು ವಿವಾದ ಸೃಷ್ಟಿಸುತ್ತಿವೆ. ಭಗವಂತ ನನಗೆ ಯಾವಾಗ ಅವಕಾಶ ಕೊಡುತ್ತಾನೋ ಕೊಡಲಿ. ನಾನು ಆತುರದಲ್ಲಿ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಲಾಲ್ ಬಾಗ್ ಉದ್ಯಾನದಲ್ಲಿ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರೊಂದಿಗೆ ನಡೆದ ಸಂವಾದದ ಬಳಿಕ ಮಾತನಾಡಿದ ಅವರು, ನಾನು ಸಾರ್ವಜನಿಕರ ಭೇಟಿಗೆ ಬಂದಾಗ ಕೆಲವರು ನೀವು ಮುಖ್ಯಮಂತ್ರಿ ಆಗಬೇಕು, ಆ ಸಮಯ ಹತ್ತಿರ ಬರುತ್ತಿದೆಯೇ ಎಂದು ಕೇಳಿದರು. ಆದರೆ ಸಿಎಂ ಆಗುವ ಕಾಲ ಹತ್ತಿರ ಬರುತ್ತಿದೆ ಎಂದು ನಾನೇ ಹೇಳಿದ್ದೇನೆ ಎಂದು ಕೆಲವು ಮಾಧ್ಯಮಗಳು ಸುದ್ದಿ ತಿದ್ದಿ ಪ್ರಸಾರ ಮಾಡುತ್ತಿವೆ. ನೀವು ಹಾಗೆಲ್ಲ ಸುದ್ದಿ ತಿರುಚಿ ತೋರಿಸಬೇಡಿ. ನಾನು ಸಿಎಂ ಹುದ್ದೆ ಅಲಂಕರಿಸಲು ಆತುರದಲ್ಲಿ ಇಲ್ಲ. ನಾನು ಇಲ್ಲಿಗೆ ಬಂದಿರುವುದು ಸಾರ್ವಜನಿಕರ ಸೇವೆ ಮಾಡಲು. ಜನರ ಸೇವೆ ಮಾಡಲು ಹಗಲು ರಾತ್ರಿ ತಿರುಗುತ್ತಿದ್ದೇನೆ ಎಂದರು.

ನಾನು ಎಲ್ಲಿ ಆ ರೀತಿಯ ಹೇಳಿಕೆ ನೀಡಿದ್ದೇನೆ ಹೇಳಿ, ನಾನು ಆ ರೀತಿ ಹೇಳಿಲ್ಲ. ಅದರ ಅಗತ್ಯವೂ ನನಗೆ ಇಲ್ಲ. ನನಗೆ ನನ್ನ ಗುರಿ ಗೊತ್ತಿದೆ. ಭಗವಂತ ನನಗೆ ಯಾವಾಗ ಅವಕಾಶ ಕೊಡುತ್ತಾನೋ ಕೊಡಲಿ. ರಾಜ್ಯದ ಜನರ ಸೇವೆ ಹಾಗೂ ಬೆಂಗಳೂರಿನ ನಾಗರೀಕರಿಗೆ ಉತ್ತಮ ಆಡಳಿತ ನೀಡಲು ಶ್ರಮಿಸುತ್ತಿದ್ದೇನೆ. ಇದೇ ರೀತಿ ನನ್ನ ವಿಚಾರದಲ್ಲಿ ಸುಳ್ಳು ಸುದ್ದಿ ಹಾಕಿ, ದಾರಿ ತಪ್ಪಿಸುವ ಪ್ರಯತ್ನ ಮಾಡಿದರೆ ನಾನು ಮಾನನಷ್ಟ ಮೊಕದ್ದಮೆ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

 

Call Now Button