Online News in ಕನ್ನಡ

ಅದ್ದೂರಿಯಾಗಿ ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ; ಎಡಿಸಿ

ಮೈಸೂರು: ನವೆಂಬರ್ 01 ರಂದು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್ 01 ರಂದು ನಗರದ ಓವೆಲ್ ಮೈದಾನದಲ್ಲಿ ಬೆಳಗ್ಗೆ 9 ಗಂಟೆಗೆ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ ಅವರು ಧ್ವಜಾರೋಹಣ ನೆರವೇರಿಸುವರು. ಅದಕ್ಕೂ ಮುಂಚೆ ಬೆಳಿಗ್ಗೆ 8 ಗಂಟೆಗೆ ಅರಮನೆ ಆವರಣದಲ್ಲಿ ಇರುವ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡುವರು. ಮೇರವಣಿಗೆಯು ಕಾರ್ಯಕ್ರಮ ಸ್ಥಳದಿಂದ ಹೊರಟು ಕೆ ಆರ್ ವೃತ್ತ ಮೂಲಕ ಕಾರ್ಯಕ್ರಮದ ಸ್ಥಳವನ್ನು ತಲುಪುವುದು. ಮೆರವಣಿಗೆಯಲ್ಲಿ ಕಲಾತಂಡಗಳು, ಪೊಲೀಸ್ ಬ್ಯಾಂಡ್, ಸ್ತಬ್ಧ ಚಿತ್ರಗಳು ಇರುತ್ತವೆ ಎಂದು ತಿಳಿಸಿದರು.

ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಕಾರ್ಯಕ್ರಮದ ವೇದಿಕೆ, ಶಾಮಿಯಾನ ಹಾಗೂ ಆಸನ ವ್ಯವಸ್ಥೆ, ಅಲಂಕಾರ ಮತ್ತು ಆಹ್ವಾನ ಪತ್ರಿಕೆಗಳ ಮುದ್ರಣ, ಶಿಷ್ಟಾಚಾರದ ಪ್ರಕಾರ ಗಣ್ಯರ ಆಹ್ವಾನವನ್ನು ಮಾಡಲಾಗುವುದು. ಮೆರವಣಿಗೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮೆರವಣಿಗೆಗೆ ಕಲಾ ತಂಡಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ಮೆರವಣಿಗೆಯಲ್ಲಿ ಭಾಗವಹಿಸುವ ಸ್ತಬ್ಧ ಚಿತ್ರಗಳು ಕನ್ನಡ ಭಾಷೆಯ ಹಿರಿಮೆ ಗರಿಮೆಯನ್ನು ಸಾರುವಂತೆ ಇರಬೇಕು. ನಾಡಗೀತೆಗೆ 100 ವರ್ಷ ತುಂಬಿರುವ ಕುರಿತು ಸ್ತಬ್ಧ ಚಿತ್ರ ನಿರ್ಮಿಸಬಹುದು. ಎಲ್ಲಾ ಸರ್ಕಾರಿ ನೌಕರರು ಕಡ್ಡಾಯವಾಗಿ ರಾಜ್ಯೋತ್ಸವದಲ್ಲಿ ಭಾಗವಹಿಸಬೇಕು. ನೌಕರರ ಹಾಜರಾತಿ ಪಡೆಯಲಾಗುವುದು ಎಂದು ತಿಳಿಸಿದರು.

ಕಳೆದ ಬಾರಿಯ ಶೈಕ್ಷಣಿಕ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಯಲ್ಲಿ ಕನ್ನಡ ಭಾಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಗುವುದು. ಕನ್ನಡ ರಾಜ್ಯೋತ್ಸವ ದಿನದಂದು ಪೆರೇಡ್ ನಲ್ಲಿ ಭಾಗವಹಿಸುವ ಶಾಲಾ ಕಾಲೇಜು ಮಕ್ಕಳಿಗೆ ಲಘು ಉಪಹಾರ ವ್ಯವಸ್ಥೆಯನ್ನು ಚಾಮುಂಡೇಶ್ವರಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಾಡಲಾಗುವುದು. ಕನ್ನಡ ರಾಜ್ಯೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ ಮಾಡಲಾಗುವುದು ಎಂದು ತಿಳಿಸಿದರು.

ಎಲ್ಲಾ ಅಂಗಡಿ ಮಾಲ್ ಗಳಲ್ಲಿ 60% ನಾಮಫಲಕಗಳು ಕನ್ನಡದಲ್ಲಿ ಇರಬೇಕು. ಮಹಾನಗರ ಪಾಲಿಕೆಯ ವತಿಯಿಂದ ಅನುಮತಿ ನೀಡುವಾಗ ನಾಮಫಲಕ 60% ಇರುವ ಕುರಿತು ಷರತ್ತು ವಿಧಿಸಿ ಅನುಮತಿ ನೀಡಬೇಕು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಎಂ ಡಿ ಸುದರ್ಶನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಕನ್ನಡ ಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

Call Now Button