ನವದೆಹಲಿ, ಆಗಸ್ಟ್ 1-ಮತಕಳ್ಳತನದ ಅಘಾತಕಾರಿ ಅಪರಾಧದ ವಿರುದ್ಧ ಆಗಸ್ಟ್ 5ರಂದು ಫ್ರೀಡಂ ಪಾರ್ಕ್‍ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಜನಾಂದೋಲನ ರೂಪಿಸಿದೆ. ಈ ಸಂಬಂಧ ಕಳೆದ ರಾತ್ರಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಲ್ಲಿಗೆ ಆಗಮಿಸಿದ್ದಾರೆ. ತಡ ರಾತ್ರಿ ನವ ದೆಹಲಿ ತಲುಪಿದ ರಾಜ್ಯ ನಿಯೋಗದ ನಾಯಕರು ರಾಷ್ಟ್ರೀಯ ಕಾಂಗ್ರೆಸ್ ನಾಯಕರ ಜೊತೆ ಮಾತುಕತೆ ನಡೆಸಿದರು.
ದೆಹಲಿಯಲ್ಲಿ ಬೀಡುಬಿಟ್ಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನಿನ್ನೆ ಬೆಂಗಳೂರಿನಲ್ಲಿ ನಡೆದ ಪ್ರತಿ ಜಿಲ್ಲೆಗಳ ಕಾಂಗ್ರೆಸ್ ಶಾಸಕರ ಪ್ರತ್ಯೇಕ ಸಭೆಯ ವಿವರ ಮತ್ತು ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ರಾಷ್ಟ್ರೀಯ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ. AICC ಪ್ರಧಾನ ಕಾರ್ಯದರ್ಶಿಗಳಾ ರಣದೀಪ್ ಸಿಂಗ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್ , KPCC ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿ ಹಲವರು ಉಪಸ್ಥಿತರಿದ್ದರು.


