ನವದೆಹಲಿ: ಕರ್ನಾಟಕದ ರಾಜಕಾರಣ ದೆಹಲಿಗೆ ಶಿಫ್ಟಾಗಿದ್ದು ಇಂದು ಬೆಳಗ್ಗಿನಿಂದಲೂ ರಾಷ್ಟ್ರ ಮತ್ತು ರಾಜ್ಯ ನಾಯಕರ ಪ್ರತ್ಯೇಕ ಸಭೆ, ಸಮಾವಲೋಚನೆಗಳು ನಡೆಯುತ್ತಿದೆ. ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತುಕತೆ ನಡೆದಿದೆ.

ಸುಮಾರು ಒಂದು ಗಂಟೆಗಳಿಗೂ ಹೆಚ್ಚು ಕಾಲ ದೆಹಲಿಯ ಎಐಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಸುರ್ಜಿವಾಲ ಸಹ ಭಾಗಿಯಾಗಿದ್ದಾರೆ. ಮೂಲಗಳ ಪ್ರಕಾರ, ಮೊದಲ ಸುತ್ತಿನ ಮಾತುಕತೆಯಲ್ಲಿ ನಾಯಕತ್ವ ಬದಲಾವಣೆ ವಿಷಯ ಚರ್ಚೆಗೆ ಬಂದಿಲ್ಲ ಎಂದು ಹೇಳಲಾಗಿದೆ. ಬದಲಿಗೆ ರಾಜ್ಯಸಭಾ ಮತ್ತು ವಿಧಾನ ಪರಿಷತ್ ಆಯ್ಕೆ, ಜಿಬಿಎ ಎಲೆಕ್ಷನ್, ಎಸ್‌ಐಆರ್ ಚಳವಳಿ ಕುರಿತು ಮಾತುಕತೆ ನಡೆದಿದೆ ಎನ್ನಲಾಗಿದೆ.
ಕಳೆದ ಒಂದು ವರ್ಷದಿಂದ ರಾಜ್ಯ ಕಾಂಗ್ರೆಸ್‌ನಲ್ಲಿ ತಲೆದೋರಿರುವ ನಾಯಕತ್ವ ಬಿಕ್ಕಟ್ಟಿಗೂ ತೆರೆ ಬೀಳುವ ಸಾಧ್ಯತೆಗಳು ಹೆಚ್ಚಾಗಿರುವ ಹಿನ್ನಲ್ಲೆಯಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ರಾಜಕಾರಣದ ಕಡೆಗೆ ರಾಜ್ಯ ನೋಟ ಬೀರಿದೆ. ಸದ್ಯದ ಪರಿಸ್ಥಿತಿಯಲ್ಲಿ ಸಚಿವ ಸಂಪುಟ ವಿಸ್ತರಣೆ, ವಿಧಾನ ಪರಿಷತ್ ಸದಸ್ಯತ್ವಕ್ಕೆ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ವರಿಷ್ಠರು ಚರ್ಚೆ ನಡೆಸಿದ್ದಾರೆ.
ಹೈಕಮಾಂಡ್ ಕರೆ ನೀಡಿದ ಹಿನ್ನಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂಟಕ್ಕೂ ಹೆಚ್ಚು ಸಚಿವರು, 20ಕ್ಕೂ ಹೆಚ್ಚು ಶಾಸಕರನ್ನು ಒಳಗೊಂಡಂತೆ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಬೆಳಗ್ಗೆ ಹೈಕಮಾಂಡ್ ಭೇಟಿಗೂ ಮುನ್ನ ತಮ್ಮ ಆಪ್ತರೊಂದಿಗೆ ಉಪಹಾರ ಕೂಟದಲ್ಲಿ ಪೂರ್ವ ಸಮಾವಲೋಚನೆ ನಡೆಸಿದ್ದಾರೆ.
ಸಚಿವರಾದ ಡಾ. ಜಿ. ಪರಮೇಶ್ವರ್, ಡಾ. ಹೆಚ್.ಸಿ. ಮಹಾದೇವಪ್ಪ, ಸತೀಶ್ ಜಾರಕೀಹೊಳಿ, ಎಂ.ಬಿ. ಪಾಟೀಲ್ ಸೇರಿದಂತೆ ಪ್ರಮುಖ ನಾಯಕರು ಸಿಎಂ ಜತೆ ಇದ್ದಾರೆ. ಸಭೆಯ ವೇಳೆ ಜಿಬಿಎ ಚುನಾವಣೆ, ವಿಧಾನ ಪರಿಷತ್ ಚುನಾವಣೆ, ಎಸ್‌ಐಆರ್ ವಿರುದ್ಧ ಹೋರಾಟಕ್ಕೆ ಸಂಬಂಧಿಸಿದಂತೆ ಚರ್ಚೆಗಳು ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಪಟ್ಟು:
ಒಂದೆಡೆ ಸಿಎಂ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ದೆಹಲಿಗೆ ಆಹ್ವಾನಿಸಿದ ಬೆನ್ನ ಹಿಂದೆಯೇ ಡಿಸಿಎಂ ಡಿ.ಕೆ. ಶಿವಕುಮಾರ್ ಏಕಾಂಗಿಯಾಗಿ ದೆಹಲಿಗೆ ತೆರಳಿದ್ದಾರೆ. ಆಮೂಲಕ ಹೈಕಮಾಂಡ್ ಮೇಲೆ ಒತ್ತಡ ತಂತ್ರ ಅನುಸರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಒಂದು ವೇಳೆ ಸಚಿವ ಸಂಪುಟ ಪುನರ್ ರಚನೆಗೆ ಮಾತ್ರ ಚರ್ಚೆ ಸೀಮಿತಗೊಂಡರೆ ನಾಯಕತ್ವ ಬದಲಾವಣೆ ಕೂಗಿಗೆ ಹಿನ್ನಡೆಯಾಗಲಿದೆ ಎಂದು ಹೇಳಲಾಗಿದೆ.


