ಬೆಂಗಳೂರು: ಮದ್ದೂರಿನಲ್ಲಿ ನಡೆದ ಕೋಮುಗಲಭೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 21 ಜನರನ್ನು ಈಗಾಗಲೇ ಬಂಧಿಸಿದ್ದು, ನಾವು ಯಾವುದೇ ಜಾತಿ – ಧರ್ಮಗಳನ್ನು ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮದ್ದೂರು ಗಲಭೆಗೆ ಸಂಬಂಧಪಟ್ಟಂತೆ ಬಿಜೆಪಿಯವರು ಪಾದಯಾತ್ರೆ ಕೈಗೊಂಡಿದ್ದಾರೆ. ಪರಿಸ್ಥಿತಿ ಮತ್ತಷ್ಟು ಹದಗೆಡುವಂತೆ ಮಾಡಿ, ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶವಾಗಿದೆ. ಮೈಸೂರಿನಲ್ಲಿ ಚಾಮುಂಡಿ ಬೆಟ್ಟ ಚಲೋ ಎಂಬ ಕಾರ್ಯಕ್ರಮ ಮಾಡಿದರು. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರದ ಆರ್ ಎಸ್ ಎಸ್ ಸಂಘಟನೆಯವರು ಇದರಲ್ಲಿ ಪಾಲ್ಗೊಂಡು, ಶಾಂತಿ ಕದಡುವ ಕೆಲಸವನ್ನು ಮಾಡುತ್ತಾರೆಂಬ ಕಾರಣಕ್ಕೆ ಪೊಲೀಸರು ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನೀಡಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯ ಬಿಜೆಪಿಯಿಂದ ಕೇಂದ್ರಕ್ಕೆ ದೂರು
ಮದ್ದೂರು ಗಲಭೆಗೆ ಸಂಬಂಧಿಸಿದಂತೆ ಯಾವುದೇ ಪಕ್ಷ, ಸಮುದಾಯವರೇ ಆಗಿದ್ದರೂ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಬಿಜೆಪಿಯವರು ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಕೇಂದ್ರ ಗೃಹ ಸಚಿವರಿಗೆ ದೂರು ನೀಡಿದ ಬಗ್ಗೆ ಗಮನಕ್ಕೆ ಬಂದಿದೆ. ಕೇಂದ್ರದ ವಿರುದ್ಧ ನಡೆದ ರೈತ ಚಳವಳಿಯಲ್ಲಿ ಅನೇಕ ರೈತರು ಪ್ರಾಣ ಕಳೆದುಕೊಂಡರು. ಆಗ ಬಿಜೆಪಿಯವರು ಎಲ್ಲಿದ್ದರು? ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಬಿಜೆಪಿಯವರು ಧ್ವನಿ ಎತ್ತಲಿಲ್ಲವೇಕೆ? ಮಣಿಪುರದಲ್ಲಿ ಹಿಂಸಾಚಾರ ನಡೆದರೂ, ಪ್ರಧಾನಿಯವರು ಮಣಿಪುರಕ್ಕೆ ಭೇಟಿ ನೀಡಲೇ ಇಲ್ಲ ಎಂದು ಪ್ರಶ್ನಿಸಿದ್ದಾರೆ.

