ಮೈಸೂರು : ಮೈಸೂರಿನ ದಟ್ಟಗಳ್ಳಿಯ ಪಬ್ ನಲ್ಲಿ ಭೀಕರ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಲೈಸೆನ್ಸ್ ಪಡೆಯದೇ ಪಬ್ ನಡೆಸುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಚಿರಾದ ಬಳಿಕ ಇದೇ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿ ಪಬ್ ಸ್ಪೋಟದ ಸ್ಥಳ ಪರಿಶೀಲಿಸಿದ ಅವರು,
ಪ್ರಕರಣ ಸಂಬಂಧ ಪಬ್ ಮಾಲೀಕನ ವಿರುದ್ಧ ದೂರು ದಾಖಲಾಗಿದೆ. ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು ಮಾಡಲಾಗಿದೆ ಎಂದು ತಿಳಿಸಿದರು.
ಅಗ್ನಿಶಾಮಕ ಇಲಾಖೆ ಅನುಮೋದನೆ ಮತ್ತು ಅಗತ್ಯ ಸುರಕ್ಷತಾ ಪ್ರಮಾಣಪತ್ರಗಳನ್ನು ಪಡೆಯದೇ ಕೆಲವು ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿರುವುದು ಗಮನಕ್ಕೆ ಬಂದಿದೆ. ಅಗ್ನಿ ನಿರೋಧಕ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಸಂಬಂಧಿತ ಅಧಿಕಾರಿಗಳು ಈ ಕುರಿತು ನಿರಂತರ ನಿಗಾ ವಹಿಸಬೇಕು.
ಮದ್ಯ ಮಾರಾಟ ಹಾಗೂ ಸೇವನೆಗೆ ಸಂಬಂಧಿಸಿದಂತೆ, ಪರವಾನಗಿ ಇಲ್ಲದ ಸ್ಥಳಗಳಲ್ಲಿ ಮದ್ಯ ಸೇವನೆ ಅಥವಾ ಪೂರೈಕೆ ಕಾನೂನು ಬಾಹಿರವಾಗಿದೆ. ಎಲ್ಲಾ ನಿಯಮಗಳನ್ನು ಪಾಲಿಸಿ, ಅಗತ್ಯ ಅನುಮತಿಗಳನ್ನು ಪಡೆದ ಸಂಸ್ಥೆಗಳಿಗೆ ಮಾತ್ರ ಪರವಾನಗಿ ನೀಡಬೇಕು. ನಿಯಮ ಉಲ್ಲಂಘಿಸುವ ರೆಸ್ಟೋರೆಂಟ್ಗಳು ಮತ್ತು ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಯಾವುದೇ ದೂರುಗಳು ಬಂದಲ್ಲಿ ಅವುಗಳನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ದುರಂತಗಳು ಸಂಭವಿಸಿದ ನಂತರ ಕ್ರಮ ಕೈಗೊಳ್ಳುವ ಬದಲು, ಅವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಬಲಪಡಿಸುವುದು ಅಗತ್ಯವಾಗಿದೆ. ನಗರಗಳ ವೇಗವಾದ ಜನಸಂಖ್ಯೆ ವೃದ್ಧಿ ಮತ್ತು ನಗರೀಕರಣದ ಹಿನ್ನೆಲೆಯಲ್ಲಿ, ಸಾರ್ವಜನಿಕ ಸುರಕ್ಷತೆ ಹಾಗೂ ನಿಯಂತ್ರಣ ವ್ಯವಸ್ಥೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕಾಗಿದೆ. ಮೃತ ವ್ಯಕ್ತಿಗಳ ಕುಟುಂಬಕ್ಕೆ ಪರಿಹಾರ ನೀಡುವ ಸಂಬಂಧ ಸಿಎಂ ಡಿಕೆಶಿ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ಅಧಿಕಾರಿಗಳ ಸಭೆ:
ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು, ಅಧಿಕಾರಿಗಳ ಸಭೆ ನಡೆಸಿದರು. ಸರ್ಕಾರಿ ಅಥಿತಿಗೃಹದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಯಿತು.
ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ ಸಿಇಓ ಯುಕೇಶ್ ಕುಮಾರ್, ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಜಿಲ್ಲಾ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.


